ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಹೊನ್ನಾಳಿ ಹಿರೇಕಲ್ಮಠದಲ್ಲಿ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕೂಡಲಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ವಿನಯ್ ಕುಮಾರ್ ಜಿ.ಬಿ ಅವರಿಗೆ ಆಶೀರ್ವದಿಸಿದ ಶ್ರೀಗಳು ಒಳ್ಳೆಯದಾಗಲಿ ಎಂದು ಹಾರೈಸಿದರು. ಈ ವೇಳೆ ಮಾತನಾಡಿದ ವಿನಯ್ ಕುಮಾರ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗುವ ವಿಶ್ವಾಸ ಇತ್ತು. ಆದ್ರೆ, ಕೊನೆ ಗಳಿಗೆಯಲ್ಲಿ ಕೈ ತಪ್ಪಿತು. ಹಾಗಾಗಿ, ಪಕ್ಷೇತರನಾಗಿ ಸ್ಪರ್ಧೆ ಮಾಡಿದ್ದು, ಎಲ್ಲರೂ ಪ್ರೀತಿ ವಿಶ್ವಾಸ ತೋರುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಪಾದಯಾತ್ರೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜನಾಭಿಪ್ರಾಯಕ್ಕೆ ಮಣಿದು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಜನರು ತೋರಿರುವ ಪ್ರೀತಿ, ವಿಶ್ವಾಸ ಹಾಗೂ ತುಂಬಿರುವ ಆತ್ಮಸ್ಥೈರ್ಯದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ನಿಮ್ಮ ಆಶೀರ್ವಾದ ಬೇಕು ಎಂದು ಕೋರಿದರು.