ಬೆಳಗಾವಿ, ಆ.4: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಸತಿನಿಲಯಗಳಿಗೆ ಭೇಟಿ ನೀಡಿದ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ಅವರು, ವಸತಿನಿಲಯಗಳಲ್ಲಿ ಆಹಾರ ಗುಣಮಟ್ಟ ಮತ್ತು ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮತ್ತು ಮುರಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿನಿಲಯಗಳಿಗೆ ಶನಿವಾರ(ಆ.3) ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡಲಾಗುವ ಊಟೋಪಹಾರ, ಆಹಾರಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು.
ನಿಲಯದ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಶಿವಪ್ರಿಯಾ ಕಡೇಚೂರ ಅವರು, ವಿದ್ಯಾರ್ಥಿಗಳಿಗೆ ಇಂದಿನ ಸ್ಥರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬುದರ ಬಗ್ಗೆ ಸಲಹೆಗಳನ್ನು ನೀಡಿದರು.
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ.
ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಆಹಾರದೊಂದಿಗೆ ಎಲ್ಲ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿರುತ್ತದೆ. ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಸುಸುಜ್ಜಿತವಾದ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸ್ಟಡಿ ಹಾಲ್ ,ಪೀಠೋಪಕರಣಗಳು ಇನ್ನಿತರ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಇದಲ್ಲದೇ ಮೆಟ್ರಿಕ್-ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ನೈಟ್ ಡ್ರೇಸ್ , ಟ್ರ್ಯಾಕ್ ಸೂಟ್ ಕೂಡ ನೀಡಲಾಗುತ್ತಿದೆ ಇವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಿವಪ್ರಿಯಾ ಕಿವಿಮಾತು ಹೇಳಿದರು.
ವಸತಿನಿಲಯದ ವಾರ್ಡನ್, ಇತರೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.