ದಾವಣಗೆರೆ:ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಾವಣಗೆರೆ ವತಿಯಿಂದ ಆಗಸ್ಟ್ 8 ಮತ್ತು 9ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಪ್ರಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕುವೆಂಪು ಕನ್ನಡ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೀಕ್ಷೇತ್ರ ಶ್ರೀಶೈಲ ಜಗದ್ಗುರು ಪೀಠದ ಪೂಜ್ಯ ಶ್ರೀ ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮಿಗಳು, ಮಹಿಳೆಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಬೌದ್ಧಿಕ ಕೊಡುಗೆಯನ್ನು ಸಮಾಜ ಗುರುತಿಸುವಲ್ಲಿ ಇಂತಹ ಸಾಹಿತ್ಯ ಸಮ್ಮೇಳನಗಳು ಮಹತ್ವದ ಪಾತ್ರ ವಹಿಸುತ್ತವೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ತೊಗಲೇರಿ ವಹಿಸಿ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ದಿನೇಶ್ ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ, ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸುಮತಿ ಜಯಪ್ಪ, ಸಮ್ಮೇಳನದ ಪ್ರಧಾನ ಸಂಚಾಲಕಿ ವೀಣಾ ಕೃಷ್ಣಮೂರ್ತಿ, ವಿನೂತನ ಮಹಿಳಾ ಸಮಾಜದ ಅಧ್ಯಕ್ಷೆ ಹೇಮಾ ಗಣೇಶ್ ಶೇಟ್, ಕದಳಿ ವೇದಿಕೆಯ ಅಧ್ಯಕ್ಷೆ ನಿರ್ಮಲಾ ಶಿವಕುಮಾರ್, ಜಯಮ್ಮ ನೀಲಗುಂದ, ಯಶಾ ದಿನೇಶ್, ಸಂಧ್ಯಾ ಸುರೇಶ್, ಓಂಕಾರಮ್ಮ ರುದ್ರಮುನಿಸ್ವಾಮಿ, ಟಿ.ಎಸ್.ಶೈಲಜಾ, ಗಾಯತ್ರಿ ಜಿ.ಎಸ್., ಪತ್ರಕರ್ತೆ ರಾಜೇಶ್ವರಿ, ವೀಣಾ ಮಹಾಂತೇಶ್, ಪತ್ರಕರ್ತೆ ರುದ್ರಮ್ಮ, ನಂದಿನಿ ಕಂಬಿನೂಲು, ಸುನಂದಾ ವರ್ಣೇಕರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಜಿಗಳಿ ಪ್ರಕಾಶ್, ಸತ್ಯಭಾಮ ಮಂಜುನಾಥ್, ಎಸ್.ಎಂ. ಮಲ್ಲಮ್ಮ, ಬೇತೂರು ಷಡಾಕ್ಷರಪ್ಪ, ಸೇರಿದಂತೆ ಸ್ವಾಗತ ಸಮಿತಿಯ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.(ವರದಿ:ಕಾ|ರಾಘವೇಂದ್ರ ನಾಯರಿ)

