ದಾವಣಗೆರೆ: ದೇಶದ ಸ್ವಾತಂತ್ರ್ಯ ಸುಲಭವಾಗಿ ದೊರಕಿದ್ದಲ್ಲ. ಹಲವು ಚಳವಳಿ, ತ್ಯಾಗ ಹಾಗೂ ಬಲಿದಾನಗಳ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ ಎಂದು ಗುರುಕುಲ ಶಾಲೆಯ ಸ್ಥಾಪಕ ಹಾಗೂ ಅಧ್ಯಕ್ಷರಾದ ಅಬ್ದುಲ್ ಆರ್ ತಿಳಿಸಿದರು.
ಇಲ್ಲಿನ ನಿಜಲಿಂಗಪ್ಪ ಬಡಾವಣೆಯ ಗುರುಕುಲ ವಸತಿಯುತ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಸಾವಿರಾರು ದೇಶಪ್ರೇಮಿಗಳ ತ್ಯಾಗವನ್ನು ಸದಾ ಸ್ಮರಿಸಬೇಕು. ಪ್ರತಿಯೊಬ್ಬರಲ್ಲೂ ದೇಶಪ್ರೇಮದ ಭಾವನೆ ಮೂಡಬೇಕು ಎಂದರು.
ವಿದ್ಯಾರ್ಥಿಗಳಿಗೆ ಶಿಸ್ತು-ಮಾನವೀಯತೆ ಅಗತ್ಯ:
ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ಶಿಸ್ತು, ಪ್ರಾಮಾಣಿಕತೆ, ಮಾನವೀಯತೆ ಹಾಗೂ ದೇಶಪ್ರೇಮ ಬೆಳೆಸಿಕೊಳ್ಳಬೇಕು. ಸಾರ್ವಜನಿಕ ಆಸ್ತಿ ರಕ್ಷಣೆ, ಪರಿಸರ ಕಾಳಜಿ ಮತ್ತು ಜಾತೀಯತೆ ಅಳಿಸಿ ಸಮಾನತೆಯ ಮನೋಭಾವ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಲಹೆ ನೀಡಿದರು.
ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದ್ದು, ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಚಟುವಟಿಕೆಗಳ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಮನಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ:
ಕಾರ್ಯಕ್ರಮದ ಅಂಗವಾಗಿ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಬ್ರಿಟಿಷರ ವಿರುದ್ಧದ ಹೋರಾಟವನ್ನು ಬಿಂಬಿಸುವ ರೂಪಕ, ಕರಾಟೆ ಪ್ರದರ್ಶನ ಹಾಗೂ ಮನಮೋಹಕ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ:ಅಣ್ಣಪ್ಪ)

