ದಾವಣಗೆರೆ:ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ನಗರದ ಎನ್.ಆರ್.ಎಲ್.ಎಂ ಯೋಜನೆಯಡಿ ಅಕ್ಕ ಕೆಫೆಗೆ ಭೇಟಿ ನೀಡಿ, ಮೂಲಭೂತ ಸೌಕರ್ಯ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೆಳಗಿನ ಉಪಹಾರ ಸೇವಿಸಿ, ಅಕ್ಕ ಕೆಫೆಯ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಶುವೈದ್ಯಕೀಯ ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ಉತ್ತಮ ಪರಿಸರ ನಿರ್ಮಿಸುವಂತೆ ಹಾಗೂ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಕ್ರಿಯಾಯೋಜನೆ ರೂಪಿಸುವಂತೆ ಪಿಡಿಒ ಮತ್ತು ವೈದ್ಯಾಧಿಕಾರಿಗೆ ಸೂಚಿಸಿದರು.
ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ವಾತ್ಸಲ್ಯ ಕೇಂದ್ರದ ಕೊಠಡಿ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ನಂತರ ಅಂಚೆ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳು ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಸೇವೆಗಳ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

